ಬೆಂಗಳೂರು: ಪಿಪಿಇ ಕಿಟ್ಗಳ ತಯಾರಿಕೆ, ಖರೀದಿ ಹಾಗೂ ವಿತರಣೆ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಡಾ. ರಾಜೀವ್ ರಮೇಶ್ ಗೋಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ಪೀಠ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಪಿಪಿಇ ಕಿಟ್ಗಳ ತಯಾರಿಕೆ, ಖರೀದಿ ಮತ್ತು ವಿತರಣೆಗೆ ನಿರ್ದಿಷ್ಟ ಮಾನದಂಡಗಳಿಲ್ಲ. ಈ ವಿಚಾರದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪಾಲಿಸಲಾಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ಮೇ 28ಕ್ಕೆ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್: ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ ನೆರೆ ರಾಜ್ಯಗಳಲ್ಲಿರುವ ಕಲಬುರಗಿಯ ವಲಸಿಗರನ್ನು ವಾಪಸ್ ಕರೆತರಲು ನಿರ್ದೇಶಿಸುವಂತೆ ಕೋರಿ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.ಲಾಕ್ಡೌನ್ನಿಂದಾಗಿ ನೆರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕಲಬುರಗಿ ಮೂಲದ ಕಾರ್ವಿುಕರು, ವಿದ್ಯಾರ್ಥಿಗಳು ಹಾಗೂ ಇತರ ದುರ್ಬಲ ವರ್ಗದ ಜನರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ನಿದೇಶಿಸುವಂತೆ ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಮುಖ್ಯ ಕಾರ್ಯದರ್ಶಿ, ಕಲಬುರಗಿ ಜಿಲ್ಲಾಧಿಕಾರಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಈಶಾನ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.1ಕ್ಕೆ ಮುಂದೂಡಿತು.
ರಾಜ್ಯದ ಸುಗ್ರೀವಾಜ್ಞೆ ಸಾಮ್ಯತೆ ಹೊಂದಿಲ್ಲ: ಕೋವಿಡ್-19 ತಡೆ ಹಾಗೂ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿರುವ ಸಿಬ್ಬಂದಿ ಮೇಲಿನ ಹಲ್ಲೆ ತಡೆಗಟ್ಟಲು ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯೊಂದಿಗೆ ಸಾಮ್ಯತೆ ಹೊಂದದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೈಕೋರ್ಟ್ಗೆ ಕೇಂದ್ರ ತಿಳಿಸಿದೆ. ರಾಜ್ಯ ಸರ್ಕಾರದ ಸುಗ್ರಿವಾಜ್ಞೆ ಕೇಂದ್ರದ ಸುಗ್ರೀವಾಜ್ಞೆಗೆ ತದ್ವಿರುದ್ಧವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ವೇಳೆ ಕೇಂದ್ರ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದರು.
(ಮಾಹಿತಿ ಕೃಪೆ ವಿಜಯವಾಣಿ...)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ