ಬೆಂಗಳೂರು: 'ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಮಂದಿ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಒಂದು ತಿಂಗಳಲ್ಲಿ ಎರಡನೇ ಬಾರಿ ಇಂಥ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು, ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ.'
'ಆದರೆ ತನ್ನ ಆಂತರಿಕ ಸಮಾಸ್ಯೆಗಳಲ್ಲೇ ಮುಳುಗಿರುವ ಈ ಸರ್ಕಾರಕ್ಕೆ ಇತ್ತ ಗಮನ ಹರಿಸಲು ಸಾಧ್ಯವಾಗಿಲ್ಲ.
'ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದವಾಗಿದೆ. ಹೇಳಿಕೆ ನೀಡುವ ಸರ್ಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧ ಜೀವಿಗಳ ಬಲಿ ಆಗಿರುವುದು. ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿಲ್ಲ ಎಂಬುದಕ್ಕೆ ಈ ದುರಂತ ಸಾಕ್ಷಿ. ಈ ಸರ್ಕಾರ ಹೇಳುವುದೊಂದು, ಮಾಡುವುದೊಂದು' ಎಂದು ಟೀಕಿಸಿರುವ ಅವರು, ಸರ್ಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜತೆಗೆ ಈ ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
'ರಾಜ್ಯ ಸರ್ಕಾರ ಇನ್ನಾದರೂ ನಿಜವಾಗಿ ಎಚ್ಚೆತ್ತುಕೊಂಡು, ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು' ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.
ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ