ಚನ್ನಗಿರಿ: 'ರಾಜ್ಯದಾದ್ಯಾಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಕೆಎಸ್‌ಡಿಎಲ್‌ನಿಂದ ₹ 1 ಕೋಟಿ ವೆಚ್ಚದಲ್ಲಿ 500 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ತಯಾರಿಕಾ ಘಟಕವನ್ನು ಇಲ್ಲಿ ಪ್ರಾರಂಭಿಸುತ್ತಿರುವುದು ಸ್ವಾಗತಾರ್ಹ' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಸುಧಾಕರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಕೆಎಸ್‌ಡಿಎಲ್‌ನಿಂದ ಆಮ್ಲಜನಕ ತಯಾರಿಕಾ ಘಟಕದ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಸ್ವಂತ ಖರ್ಚಿನಿಂದ 30 ಹಾಸಿಗೆ, ದಿಂಬು, ಮಂಚಗಳನ್ನು ವ್ಯವಸ್ಥೆ ಮಾಡಿದ್ದಾರೆ. ಈ ಎಲ್ಲಾ ಹಾಸಿಗಗಳಿಗೂ ಅತಿ ಶೀಘ್ರದಲ್ಲಿ ಆಮ್ಲಜನಕ ಪೂರೈಸುವ ವ್ಯವಸ್ಥೆ ಮಾಡಲಾಗುವುದು. ವೈದ್ಯರು ಹಾಗೂ ದಾದಿಯರ ಕೊರತೆ ಬಗ್ಗೆ ಗಮನಹರಿಸಲಾಗುವುದು. 6 ವೆಂಟಿಲೇಟರ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಇದ್ದು, ನಾಲ್ಕೈದು ದಿನಗಳಲ್ಲಿ ವೆಂಟಿಲೇಟರ್‌ಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನೊಂದು ವಾರದೊಳಗೆ ಇಲ್ಲಿನ ಆರೋಗ್ಯ ಕೇಂದ್ರಕ್ಕೆ ಅಗತ್ಯವಾದ ಎಲ್ಲ ರೀತಿಯ ಸಲಕರಣೆಗಳನ್ನು ಇಲಾಖೆಯಿಂದ ಪೂರೈಸಲಾಗುವುದು. 30 ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ. ತಕ್ಷಣ ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಸತೀಶ್ ಅವರನ್ನು ಶಾಸಕರ ಮನವಿ ಮೇರೆಗೆ ನಿಯೋಜನೆ ಮಾಡಲು ಆದೇಶಿಸಲಾಗಿದೆ. ಆರೋಗ್ಯ ಕೇಂದ್ರಕ್ಕೆ 50 ಹಾಸಿಗೆಗಳಿಗೆ ಆಮ್ಲಜನಕ ಪೂರೈಸಲು ಹಾಗೂ 30 ಜಂಬೋ ಸಿಲಿಂಡರ್‌ಗಳನ್ನು ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿಎಚ್‌ಒ ಡಾ. ನಾಗರಾಜ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ, ತಹಶೀಲ್ದಾರ್ ಪಟ್ಟರಾಜಗೌಡ, ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಭು ಇದ್ದರು.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ