ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಾಹಿತಿ ಸಿದ್ದಲಿಂಗಯ್ಯ ಅವರು ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಅವರನ್ನು ಮೇ 2ರಂದು ರಂಗಾದೊರೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸುಮಾರು ಒಂದು ತಿಂಗಳ ಅವಧಿ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಿಸದೇ ಶುಕ್ರವಾರ ನಿಧನರಾದರು.
ಸಿದ್ದಲಿಂಗಯ್ಯ ಅವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ.
ಶನಿವಾರ ಬೆಳಿಗ್ಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್ ಅವರನ್ನೊಳಗೊಂಡಂತೆ ಹಲವು ರಾಜಕೀಯ ಮುಖಂಡರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.
ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಹೇಳಿದರು.
ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಉತ್ತಮ ಭಾಷಣಕಾರರಾಗಿದ್ದ ಅವರು ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು. ಕರ್ನಾಟಕದ ದಲಿತ ಚಳವಳಿಗೆ ಹೊಸ ಸಂಚಲನ ನೀಡಿದ್ದ ಅಪರೂಪದ ಸಾಹಿತಿಯಾಗಿದ್ದು, ಸದಾಕಾಲ ಸಾಮಾಜಿಕ ಸಮಾನತೆಯ ಹೋರಾಟದಲ್ಲಿ ತೊಡಗಿಕೊಂಡವರು.
ಸಿದ್ದಲಿಂಗಯ್ಯ ಅವರು ಎರಡು ಬಾರಿ ವಿಧಾನಪರಿಷತ್ ಸದಸ್ಯರು ಕೂಡ ಆಗಿದ್ದರು.
(ಮಾಹಿತಿ ಕೃಪೆ Oneindia)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ